31 December 2021

ನೇತಾಜಿಯವರೇ ನಿಜವಾದ ನೇತಾರ


 


ನೇತಾಜಿಯವರೇ ನಿಜವಾದ ನೇತಾರ.


ಮಹಾತ್ಮಾ ಗಾಂಧೀಜಿಯವರ ಬಗ್ಗೆ ಅಪಾರವಾದ ಗೌರವವಿಟ್ಟುಕೊಂಡು ಅವರ ಅಹಿಂಸೆ, ಸತ್ಯಾಗ್ರಹ ಮುಂತಾದ ಅಸ್ತ್ರಗಳು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಮಹತ್ವದ ತಿರುವು ನೀಡಿವೆ ಎಂಬುದನ್ನು ಅಲ್ಲಗಳೆಯಲಾಗದು.ಆದರೂ  ಸ್ವಾತಂತ್ರ್ಯ ಪಡೆಯಲು ಸುಭಾಷ್ ಚಂದ್ರ ಬೋಸ್ ರವರ ಮಾರ್ಗವೇ ಸರಿಯಾಗಿತ್ತು ಎಂಬುದು ನನ್ನ ಅನಿಸಿಕೆ.


ನರಿ ಬುದ್ದಿಯ ಕೆಂಪು ಮೂತಿಯವರ ಕುತಂತ್ರಗಳು , ಕೆಟ್ಟ ನಡೆಗಳು, ಗೋಮುಖ ವ್ಯಾಘ್ರ ಗುಣಗಳು, ಒಡೆದು ಆಳುವ ನಿಸ್ಸೀಮರಿಗೆ ಶಾಂತಿ ಅಹಿಂಸೆಯ ನಡೆಗಳು ನಾಟಲೇ ಇಲ್ಲ ಎಂಬುದನ್ನು ನಮ್ಮ ದೇಶದ ಇತಿಹಾಸ ಓದಿದ ಯಾರಾದರೂ ಒಪ್ಪಿಕೊಳ್ಳಲೇ ಬೇಕು . ಪರಂಗಿಗಳಿಗೆ ದಂಡಂ ದಶಗುಣಂ ನೀತಿಯೇ ಸರಿಯಾಗಿತ್ತು.ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡಿಸಿವೆ ಎಂದು ಗುಡುಗಿದ ನೇತಾಜಿವರ ಘರ್ಜನೆಗೆ ಬ್ರಿಟಿಷರು ಅಕ್ಷರಶಃ ಕಂಗಾಲಾಗಿ ಹೋದರು.ಅವರ ಆಕ್ರಮಣಕಾರಿ ನೀತಿಗೆ ಆಗಿನ ಯುವಜನ ಮಾರುಹೋಗಿ ಭಾರತೀಯ ರಾಷ್ಟ್ರೀಯ ಸೇನೆ ಸೇರಿ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು.ಇದರಲ್ಲಿ ಮಹಿಳೆಯರು ಸಹ ಪಾಲ್ಗೊಂಡರು ಎಂಬುದನ್ನು ಕ್ಯಾಪ್ಟನ್ ಲಕ್ಷ್ಮೀ ಸೆಹಗಲ್ ರಂತವರನ್ನು ಉದಾಹರಣೆ ನೀಡಬಹುದು.


ಹಿಂಸೆಯನ್ನು ಯಾರೂ ಪ್ರಚೋದಿಸಬಾರದು ಎಂಬುದನ್ನು ನಾನೂ ಒಪ್ಪುವೆ ಆದರೆ ದುಷ್ಟ ಸಂಹಾರ ಕ್ಕೆ ಕೊನೆಯ ಅಸ್ತ್ರವಾಗಿ ಹಿಂಸೆ ತಪ್ಪಲ್ಲ ಎಂಬ ನಮ್ಮ ಶಾಸ್ತ್ರ ಪುರಾಣಗಳಲ್ಲಿಯೂ ಉಲ್ಲೇಖವಿರುವುದನ್ನು ಗಮನಿಸಲೇಬೇಕು. ಮಹಿಷ ,ರಕ್ತಬೀಜರಂತಹ ರಕ್ಕಸರ ಸಂಹಾರ ಮಾಡದೇ ಶಾಂತಿ ಮಂತ್ರ ಪಠಿಸುತ್ತಾ ದೇವಿ ಕುಳಿತಿದ್ದರೆ ಜನರ ಪಾಡೇನಾಗುತ್ತಿತ್ತು? ಇನ್ನೂ ಕೃಷ್ಣಾವತಾರಗಳಲ್ಲಿಯೂ ಅಸುರಿ ಶಕ್ತಿಗಳ ಸಂಹಾರಕ್ಕೆ ಹಿಂಸೆ ತಪ್ಪಲ್ಲ ಎಂಬುದು ಸಾಬೀತಾಗಿದೆ.ಆದ್ದರಿಂದ ನೇತಾಜಿಯವರ ಮಾರ್ಗವೇ ಸರಿ ಎಂಬುದನ್ನು ಕೊನೆಗೆ ಮಹಾತ್ಮ ಗಾಂಧೀಜಿಯವರೇ ರೋಸಿ 1942 ರಲ್ಲಿ "ಬ್ರಿಟೀಷರೇ ಭಾರತ ಬಿಟ್ಟು ತೊಲಗಿ " ಎಂದು ಗುಡುಗಿ ಡೂ ಆರ್ ಡೈ ಎಂದು ಪರೋಕ್ಷವಾಗಿ ಪ್ರಭಲವಾದ ಹೋರಾಟಕ್ಕೆ ಕರೆ ನೀಡಿದ್ದು ನೇತಾಜಿವರ ಮಾರ್ಗವೇ ಸರಿ ಎಂಬುದನ್ನು ಒಪ್ಪಿದಂತೆ ಎಂದು ಕೆಲವರು ಹೇಳುವುದು ತಪ್ಪಲ್ಲ ಎನಿಸುತ್ತದೆ.



ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕೆಂಬ ಮಾತು ಎಂದಿಗೂ ಪ್ರಸ್ತುತ. ದುಷ್ಟ ಬುದ್ದಿಯ ಆಂಗ್ಲರ ಮಣಿಸಲು ಅಹಿಂಸೆಯ ಮಾರ್ಗ ಹಿಡಿಯದೇ ಬೇರೆ ದಾರಿಯಿರಲಿಲ್ಲ ಯುದ್ದ ಮತ್ತು ಪ್ರೀತಿಯಲ್ಲಿ ಎಲ್ಲವೂ ಸರಿ ಎಂಬಂತೆ ನಮ್ಮ ನೇತಾಜಿವರು ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿಂಸೆಯ ಮಾರ್ಗ ಅನುಸರಿಸಿದ್ದು ತಪ್ಪಲ್ಲ ಅಂದು ಅದು ಅನಿವಾರ್ಯವಾಗಿತ್ತು. ನೇತಾಜಿವರ ಮುಂದಾಲೋಚನೆ, ಅವರ ಚಿಂತನೆ ಎಂದಿಗೂ ಅನುಕರಣೀಯ ಅದಕ್ಕೆ ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಈಗಲೂ ಭಾರತೀಯರಿಗೆಲ್ಲ ಒಬ್ಬರೇ ನೇತಾಜಿ.


ಸಿಹಿಜೀವಿ

ಸಿ ಜಿ ವೆಂಕಟೇಶ್ವರ


No comments: