28 December 2023

ವಿಶ್ವ ಮಾನವ ಸಂದೇಶ ಪಾಲಿಸೋಣ..


 


ವಿಶ್ವ ಮಾನವ ಸಂದೇಶ ಪಾಲಿಸೋಣ..


ಧರ್ಮ ಜಾತಿಗಳ ಮಧ್ಯೆ ಕಚ್ಚಾಟ, ಇಸಂಗಳ ಮೇಲಾಟ, ದೇಶ ದೇಶಗಳ ಮಧ್ಯ ತಾಕಲಾಟಗಳ ಪರಿಣಾಮವಾಗಿ ಜಗತ್ತಿನಲ್ಲಿ ಇಂದು ಯಾರೂ ನೆಮ್ಮದಿಯಾಗಿಲ್ಲದ ವಾತಾವರಣದಲ್ಲಿ ವಾಸಿಸುವ ಅನಿವಾರ್ಯತೆಯಿದೆ.ಇದನ್ನು ಹೋಗಲಾಡಿಸಲು ಮದ್ದು ನಮ್ಮ ರಾಷ್ಟ್ರಕವಿ, ರಸ ಋಷಿಯ ಚಿಂತನೆ "ವಿಶ್ವ ಮಾನವ ತತ್ವ ".

ಕುವೆಂಪು ರವರ ವಿಶ್ವ ಮಾನವ ತತ್ವ ಸಾರ್ವಕಾಲಿಕ  ಈ ತತ್ವ ಅಳವಡಿಸಿಕೊಂಡರೆ ಉದಾತ್ತ ಚಿಂತನೆ ನಮ್ಮನ್ನು ಆವರಿಸುತ್ತದೆ.ಈ ನಿಟ್ಟಿನಲ್ಲಿ ಕುವೆಂಪು ಅವರ ಚಿಂತನೆಗಳನ್ನು ಪ್ರಚಾರ ಮಾಡಿ ಅಳವಡಿಸಿಕೊಳ್ಳಲು ಕರ್ನಾಟಕ ಸರ್ಕಾರ ಪ್ರತಿ ವರ್ಷ ಅವರು ಹುಟ್ಟಿದ ದಿನವನ್ನು ವಿಶ್ವ ಮಾನವ ದಿನವಾಗಿ ಆಚರಿಸಲಾಗುತ್ತದೆ. ಆದರೆ ಇದು ಕೇವಲ ಆಚರಣೆಗೆ ಮಾತ್ರ ಸೀಮಿತಾವಾಗಿರುವುದು ದುರದೃಷ್ಟಕರ.


ಕುವೆಂಪು ರವರು ತಮ್ಮ ವಿಶ್ವ ಮಾನವ ಸಂದೇಶ ಸಾರಿದ ಓ ನನ್ನ ಚೇತನ.... ಆಗು ನೀ ಅನಿಕೇತನ ...ಜಗದ ರಾಷ್ಟ್ರಗೀತೆಯಾಗಬೇಕಿದೆ..

ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ಆ ನಂತರ ಆ ಮಗುವನ್ನು "ಜಾತಿ,ಮತ"ದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗ ಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ. ಬುದ್ಧ, ಬಸವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕೆಂದು ಅವರು ಹೇಳುತ್ತಿದ್ದರು.


ವಿಶ್ವ ಮಾನವ ಗೀತೆಯು ನಮಗೆ " ಪಂಚ ಮಂತ್ರ"ಗಳನ್ನು  ಕಟ್ಟಿಕೊಡುತ್ತದೆ. 


ಪ್ರತಿಯೊಂದು ಮಗುವೂ ಹುಟ್ಟುತ್ತಲೆ ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು 'ಅಲ್ಪಮಾನವ'ನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು 'ವಿಶ್ವಮಾನವ'ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು.

ಹುಟ್ಟುವಾಗ 'ವಿಶ್ವಮಾನವನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾಂಗ, ವರ್ಣ ಇತ್ಯಾದಿಗಳಿಂದ ಬಂಧನ  ಮಾಡುತ್ತೇವೆ. ಅವೆಲ್ಲವುಗಳಿಂದ ಪಾರಾಗಿ ಅವನನ್ನು 'ಬುದ್ಧ'ನನ್ನಾಗಿ, ಅಂದರೆ ವಿಶ್ವಮಾನವನನ್ನಾಗಿ, ಪರಿವರ್ತಿಸುವುದೆ ನಮ್ಮ ವಿದ್ಯೆ, ಸಂಸ್ಕೃತಿ, ನಾಗರಿಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಲೋಕ ಉಳಿದು, ಬಾಳಿ ಬದುಕಬೇಕಾದರೆ! ಪ್ರಪಂಚದ ಮಕ್ಕಳೆಲ್ಲ 'ಅನಿಕೇತನ'ರಾಗಬೇಕು.

ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸಂಭವಿಸಿ ಹೋಗಿದ್ದಾರೆ. ಅವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊಂಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆಂಬ ಸದುದ್ದೇಶದಿಂದ ಹುಟ್ಟಿ ಕೊಂಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒಂದು ಯುಗಕ್ಕೆ ಅಗತ್ಯವೆನ್ನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ  ಮತ್ತೊಂದು ಹೊಸ ಧರ್ಮಕ್ಕೆ ಎಡೆಗೊಟ್ಟುದೂ ಉಂಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗುಂಪುಗುಂಪಾಗಿ ಜನತೆಯನ್ನು ಒಡೆದಿವೆ.ಯುದ್ಧಗಳನ್ನು ಹೊತ್ತಿಸಿವೆ. ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆಂಬಂತೆ ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನು ಮೇಲೆ ಮತಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿಂದೆ ಹೇಳಿದಂತೆ 'ಮತ ಮತ್ತು ರಾಜಕೀಯದ ಕಾಲ ಆಗಿ ಹೋಯಿತು. ಇನ್ನೇನಿದ್ದರೂ ಅಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.'

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣ ದೃಷ್ಟಿ, ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ. ಅಂದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; "ಮನುಜಮತ". ಆ ಪಥ ಈ ಪಥ ಅಲ್ಲ; "ವಿಶ್ವಪಥ". ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ ಅದುವೇ "ಸರ್ವೋದಯ". ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; "ಸಮನ್ವಯ"ಗೊಳ್ಳುವುದು. ಮಿತಮತದ ಆಂಶಿಕ ದೃಷ್ಟಿಯಲ್ಲ; ಭೌತಿಕ ಪಾರಮಾರ್ಥಿಕ ಎಂಬ ಭಿನ್ನ ದೃಷ್ಟಿಯಲ್ಲ.ಎಲ್ಲವನ್ನು ಭಗವದ್ ದೃಷ್ಟಿಯಿಂದ ಕಾಣುವ "ಪೂರ್ಣದೃಷ್ಟಿ".

ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅಂತಹ ಭಾವನೆ ಅಂತಹ ದೃಷ್ಟಿ ಬರಿಯ ಯಾವುದೊ ಒಂದು ಜಾತಿಗೆ, ಮತಕ್ಕೆ, ಗುಂಪಿಗೆ, ಒಂದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗುಂಪುಗಾರಿಕೆಗೆಂದೂ ಇವು ತೊಡಗುವುದಿಲ್ಲ.ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸಂಖ್ಯೆಯ ಮತಗಳಿರು ವುದು ಸಾಧ್ಯ.ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾಧಕವಾಗುವುದೂ ಸಾಧ್ಯ. ಈ 'ದರ್ಶನ'ವನ್ನೆ 'ವಿಶ್ವಮಾನವ ಗೀತೆ' ಸಾರುತ್ತದೆ.

 

ಕುವೆಂಪುರವರ ವಿಶ್ವ ಮಾನವ ಸಂದೇಶವನ್ನು ನಾವೆಲ್ಲರೂ ಪಾಲಿಸಿ ಅದರಂತೆ ಬಾಳೋಣ.ಜಗದ ಶಾಂತಿಗೆ ಪಣ ತೊಡೋಣ.ಸರ್ವರಿಗೂ ವಿಶ್ವ ಮಾನವ ದಿನದ ಶುಭಾಶಯಗಳು.


ಸಿಹಿಜೀವಿ ವೆಂಕಟೇಶ್ವರ

ತುಮಕೂರು


No comments: